ಭಾರತೀಯ ಮಹಿಳಾ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದೆ. ಈಗಾಗಲೇ ಟಿ20 ಸರಣಿಯನ್ನು ಭಾರತೀಯ ತಂಡ 2-1ರಿಂದ ಗೆದ್ದುಕೊಂಡಿದೆ. ಅಲ್ಲದೇ, ಏಕದಿನ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದು, ಎರಡನೇ ಪಂದ್ಯವನ್ನು ಆಡುತ್ತಿದೆ. ಈ ಎಲ್ಲ ಪಂದ್ಯಗಳಲ್ಲಿ ಭಾರತೀಯ ಮಹಿಳಾ ಆಟಗಾರ್ತಿ ಸ್ಮೃತಿ ಮಂಧಾನ ಉತ್ತಮ ಪ್ರದರ್ಶನ ತೋರುತ್ತಿದ್ದು, ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಎರಡೂ ಏಕದಿನ ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿರುವ ಸ್ಮೃತಿ ಮಂಧಾನ ಏಕದಿನ ರ‍್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಅಲ್ಲದೇ, ಟಿ20ಯಲ್ಲೂ ಎರಡನೇ ಸ್ಥಾನದಲ್ಲಿದ್ದಾರೆ. ಟಿ20ಯಲ್ಲಿ ಆಸ್ಟ್ರೇಲಿಯಾದ ಬೆತ್ ಮೂನಿ ಮೊದಲ ಸ್ಥಾನದಲ್ಲಿದ್ದಾರೆ. ಏಕದಿನ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಲಾರಾ ವೊಲ್ವಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಆಡಿದ ಟಿ20 ಸರಣಿಯ ಎಲ್ಲ ಮೂರು ಪಂದ್ಯಗಳಲ್ಲೂ ಸ್ಮೃತಿ ಮಂಧಾನ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಕೊನೆಯ ಎರಡು ಪಂದ್ಯಗಳಲ್ಲಿ 41 ಎಸೆತಗಳಲ್ಲಿ 62 ರನ್ ಮತ್ತು 47 ಎಸೆತಗಳಲ್ಲಿ 77 ರನ್ ಗಳಿಸಿದ್ದರು. ಮೊದಲ ಪಂದ್ಯದಲ್ಲಿ 53 ರನ್ ಗಳಿಸಿದ್ದರು.
ಏಕದಿನ ಶ್ರೇಯಾಂಕದಲ್ಲಿ ಈಗ ಎರಡನೇ ಸ್ಥಾನದಲ್ಲಿರುವ ಸ್ಮೃತಿ ಮಂಧಾನ ನಂಬರ್-1 ಸ್ಥಾನಕ್ಕೇರುವ ಅವಕಾಶ ಹೊಂದಿದ್ದಾರೆ.