ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ನಾಯಕರ ವಿರುದ್ಧ ಕೋರ್ ಕಮಿಟಿ ಸದಸ್ಯ ಹಾಗೂ ಮಾಜಿ ಶಾಸಕ ಶ್ರೀರಾಮುಲು ಗರಂ ಆಗಿದ್ದಾರೆ ಎನ್ನಲಾಗಿದೆ.
ನಾನು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೇನೆ. ಆದರೆ, ನನ್ನ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಪಕ್ಷ ತೊರೆಯುವ ಮಾತುಗಳನ್ನಾಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆದಿತ್ತು. ಈ ವೇಳೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಿತು. ಈ ವೇಳೆ ನಾಯಕರ ಮೇಲೆ ಮಾಜಿ ಶಾಸಕ ಶ್ರೀರಾಮುಲು ಮುನಿಸಿಕೊಂಡಿದ್ದಾರೆ ಎನ್ನಲಾಗಿದೆ.
ಚುನಾವಣೆಯ ಫಲಿತಾಂಶದ ನಂತರ ಶ್ರೀರಾಮುಲು ವಿರುದ್ಧ ಬಿಜೆಪಿ ನಾಯಕರಿಗೆ ಬಂಗಾರು ಹನುಮಂತು ದೂರು ನೀಡಿದ್ದರು. ಈ ವಿಚಾರವಾಗಿ ಕೋರ್ ಕಮಿಟಿ ಸಭೆಯಲ್ಲಿ ರಾಧಾಮೋಹನ್ ದಾಸ್ ಅಗರ್‌ವಾಲ್ ಪ್ರಶ್ನೆ ಮಾಡಿದ್ದರು. ನೀವು ಉಪ-ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಸರಿಯಾಗಿ ಕಾರ್ಯನಿರ್ವಹಣೆ ಮಾಡಿಲ್ಲ ಎಂಬ ದೂರು ಬಂದಿದೆ. ಇದಕ್ಕೆ ಉತ್ತರಿಸಿ ಎಂದು ರಾಧಾಮೋಹನ್ ದಾಸ್ ಅಗರ್‌ವಾಲ್ ಪ್ರಶ್ನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಅಗರ್‌ವಾಲ್ ಪ್ರಶ್ನೆಗೆ ಗರಂ ಆದ ಶ್ರೀರಾಮುಲು, “ನಾನು ಕಷ್ಟಪಟ್ಟು ಶ್ರಮ ವಹಿಸಿ, ಉಪ-ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಸುಖಾಸುಮ್ಮನೆ ದೂರು ನೀಡಲಾಗಿದೆ, ಇದು ಸರಿಯಲ್ಲ. ಇಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಣೆ ಮಾಡುವವರಿಗೆ ಬೆಲೆಯೇ ಸಿಗುವುದಿಲ್ಲ ಎಂದು ಬೇಸರಿಸಿಗೊಂಡಿದ್ದಾರೆ ಎಂದು ತಿಳಿದು ಬಂದಿದೆ.