ಬೆಂಗಳೂರು: ಎಸ್ಎಸ್ಎಲ್‌ಸಿ (SSLC) ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8 ರಂದು ನಿರಂಜನ್ ಶೆಟ್ಟಿ ಹೆಸರಿನ ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಹರಿದಾಡುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಬೆಂಗಳೂರು ಉತ್ತರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢಪಟ್ಟಿತ್ತು.
ಪೊಲೀಸರ ಮಾಹಿತಿ ಪ್ರಕಾರ, ತುಮಕೂರು, ರಾಮನಗರ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಶಾಲೆಗಳ ಶಿಕ್ಷಕರು ಈ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿರುವುದು ಪತ್ತೆಯಾಗಿದೆ. ತುಮಕೂರಿನ ಶಾಲೆಯೊಂದರ ಮುಖ್ಯೋಪಾಧ್ಯಾಯ ವಿ.ಡಿ. ಗಿರೀಶ್, ರಾಮನಗರದ ಸಹ ಶಿಕ್ಷಕ ಅಮ್ಜದ್ ಖಾನ್ ಸೇರಿದಂತೆ ಕಲಬುರಗಿ ಜಿಲ್ಲೆಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಬಂಧನಕ್ಕೊಳಗಾಗಿದ್ದಾರೆ.
ಬಂಧಿತರ ಪೈಕಿ ಕಲಬುರಗಿ ಜಿಲ್ಲೆಯ ಮುಖ್ಯ ಶಿಕ್ಷಕಿ ಶಾಹಿದಾ ಬೇಗಂ, ಶಿಕ್ಷಕ ಮೊಹಮ್ಮದ್ ಸಿರಾಜುದ್ದೀನ್, ಸಹ ಶಿಕ್ಷಕಿ ಫಾಹ್ಮಿದಾ ಹಾಗೂ ಶಿಕ್ಷಕಿ ಫರ್ಜಾನಾ ಬೇಗಂ ಇದ್ದಾರೆ. ಇವರ ಜೊತೆಗೆ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಎಸ್ಎಸಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ವಿವರ
- ವಿ.ಡಿ. ಗಿರೀಶ್ – ಮುಖ್ಯೋಪಾಧ್ಯಾಯ, ತುಮಕೂರು
- ಅಮ್ಜದ್ ಖಾನ್ – ಸಹ ಶಿಕ್ಷಕ, ರಾಮನಗರ
- ಶಾಹಿದಾ ಬೇಗಂ – ಮುಖ್ಯ ಶಿಕ್ಷಕಿ, ಕಲಬುರಗಿ
- ಫಾಹ್ಮಿದಾ – ಸಹ ಶಿಕ್ಷಕಿ, ಕಲಬುರಗಿ
- ಮೊಹಮ್ಮದ್ ಸಿರಾಜುದ್ದೀನ್ – ಶಿಕ್ಷಕ, ಕಲಬುರಗಿ
- ಫರ್ಜಾನಾ ಬೇಗಂ – ಶಿಕ್ಷಕಿ, ಕಲಬುರಗಿ
- ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು
ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಯಾವ ರೀತಿಯಲ್ಲಿ ನಡೆದಿದೆ, ಇನ್ನಿತರರು ಶಾಮೀಲಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಶಿಕ್ಷಣ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ತಂದಿರುವ ಈ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ.
ಇದನ್ನೂ ಓದಿ: ಟೆಕ್ಕಿ ಶರ್ಮಿಳಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ | ತನಿಖೆ ವೇಳೆ ಬಯಲಾಯ್ತು ಕೊಲೆ ರಹಸ್ಯ!



















