ಡೆಹ್ರಾಡೂನ್: ಉತ್ತರಾಖಂಡದ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸ ದೇವಿ ದೇವಸ್ಥಾನದ ಮಾರ್ಗದಲ್ಲಿ ಇಂದು (ಜುಲೈ 27) ಭಾರೀ ಕಾಲ್ತುಳಿತ ಸಂಭವಿಸಿದ್ದು, ಏಳು ಮಂದಿ ಸಾವಿಗೀಡಾಗಿ, 55ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ.
ಪವಿತ್ರ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಸಂದರ್ಭದಲ್ಲೇ ಈ ದುರಂತ ಸಂಭವಿಸಿದೆ. ದೇವಸ್ಥಾನಕ್ಕೆ ಸಾಗುವ ಮೆಟ್ಟಿಲುಗಳ ಮೇಲೆ ಕಾಲ್ತುಳಿತ ಉಂಟಾಗಿದೆ.
ಘಟನೆಗೆ ಕಾರಣವೇನು?
ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ ಎಂಬ ವದಂತಿಯೊಂದು ಹರಡಿ, ಭಕ್ತರಲ್ಲಿ ಆತಂಕ ಸೃಷ್ಟಿಯಾದದ್ದೇ ಈ ಕಾಲ್ತುಳಿತಕ್ಕೆ ಪ್ರಮುಖ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಜನಸಂದಣಿ ಹೆಚ್ಚಾಗಿದ್ದರಿಂದ ಕೆಲವರು ಹಿಂದಕ್ಕೆ ಬರಲು ಯತ್ನಿಸಿದಾಗ ತಳ್ಳಾಟ ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಾಳುಗಳನ್ನು ಆಂಬುಲೆನ್ಸ್‌ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. “ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಎಲ್ಲಾ ರೀತಿಯ ಸಹಾಯವನ್ನು ನೀಡುತ್ತಿದೆ,” ಎಂದು ಅವರು ಹೇಳಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು, ತಾವು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ತಿಳಿಸಿದ್ದಾರೆ. ರಕ್ಷಣಾ ತಂಡಗಳು ಸ್ಥಳದಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿವೆ ಎಂದು ಅವರು ಹೇಳಿದ್ದಾರೆ.
ಗಾಯಗೊಂಡ ಬಿಹಾರ ಮೂಲದ ಭಕ್ತರೊಬ್ಬರು, ದೇವಸ್ಥಾನದಲ್ಲಿ ಇದ್ದಕ್ಕಿದ್ದಂತೆ ಜನಸಂದಣಿ ಹೆಚ್ಚಾಗಿ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ತಿಳಿಸಿದ್ದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.



















