ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ(Chinnaswamy Stadium Stampede Case) 11 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದರ ಬೆನ್ನಲ್ಲೇ ಈಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್(Govindraj) ರನ್ನೂ ಕೂಡ ಬಿಡುಗಡೆ ಮಾಡಲಾಗಿದೆ.
ಇಂದು ಬೆಳಗ್ಗೆ ಬಿಜೆಪಿ ಹಾಗೂ ಜೆಡಿಎಸ್ ಜಂಟಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ(HD Kumaraswamy) ಗಂಭೀರ ಆರೋಪಗಳನ್ನು ಮಾಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದಾರೆ.
ಆರ್ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸನ್ಮಾನ ಮಾಡುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಡ ಹೇರಿದ್ದು, ಗೋವಿಂದ್ ರಾಜ್ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು.