ಹುಬ್ಬಳ್ಳಿ | ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಗುಡ್ ಬೈ ಹೇಳಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೇಳಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ನನ್ನನ್ನು ಕಡೆಗಣಿಸಿ ಎಸ್.ವಿ.ಸಂಕನೂರು ಅವರಿಗೆ ಟಿಕೆಟ್ ನೀಡಿದ್ದರಿಂದ ನೋವಾಗಿದೆ. ಹೀಗಾಗಿ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಎಂದು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರಿಗೆ ಬೆಲೆಯಿಲ್ಲ ಎನ್ನುವುದು ದೃಢವಾಗಿದೆ. ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಈ ಮೂಲಕ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗಿದೆ. 37 ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದೇನೆ. ಇದನ್ನು ಗುರುತಿಸದೇ ಪಕ್ಷ ಹೊರಗಿನಿಂದ ಬಂದವರಿಗೆ ಮಣೆ ಹಾಕಿ ಟಿಕೆಟ್ ನೀಡಿದ್ದು, ಸಾಕಷ್ಟು ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?



















