ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ. ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕೆಸರೆರಚಾಟ ಆರಂಭವಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಅಭಯ ನೀಡಿದ ಬೆನ್ನಲ್ಲಿಯೇ ದೆಹಲಿಗೆ ಬುಲಾವ್ ನೀಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇನ್ನೊಂದೆಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿವೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿ ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಹೀಗಾಗಿ ಆ. 19ರಂದು ಹೈಕೋರ್ಟ್ ಗೆ ಸಿಎಂ ರಿಟ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಹೊರಟಿದ್ದಾರೆ. ಆಗಸ್ಟ್ 23ರಂದು ದೆಹಲಿಗೆ ತೆರಳಲಿದ್ದು, ಪ್ರಾಸಿಕ್ಯೂಷನ್ ವಿಚಾರದ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲಿದ್ದಾರೆ. ಇದು ರಾಜ್ಯ ರಾಜಕಾರಣದ ಸಂಚಲನಕ್ಕೆ ಕಾರಣವಾಗಿದೆ.
ಇದಕ್ಕೂ ಮುನ್ನಾ ದಿನ ಆ. 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಭೆಯಲ್ಲಿ ರಾಜ್ಯ ರಾಜಕಾರಣದ ಬೆಳವಣಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಎಲ್ಲ ಶಾಸಕರು ತಮ್ಮ ಬೆಂಬಲಕ್ಕಿರುವಂತೆ ಮನವಿ ಮಾಡಲಿದ್ದಾರೆ. ರಾಜ್ಯಪಾಲರ ಆದೇಶದಕ್ಕೆ ತಡೆ ನೀಡುವಂತೆ ಹೈಕೋರ್ಟ್ ಗೆ ನಾಳೆ ಅರ್ಜಿ ಸಲ್ಲಿಸಲಿದ್ದಾರೆ. ಒಂದು ವೇಳೆ ಹೈಕೋರ್ಟ್ ನಿರಾಕರಿಸಿದರೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದಾರೆ. ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಗಮನಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.