ಬೆಂಗಳೂರು: ಮುಡಾ (muda) ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ.
ಹೀಗಾಗಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸೂಚಿಸಿದೆ. ಸೋಮವಾರ ಬೆಳಿಗ್ಗೆ 11ಕ್ಕೆ ರಾಜ್ಯಾದ್ಯಂತ ಪ್ರತಿಭಟಿಸಲು ಕೆಪಿಸಿಸಿ ಕರೆ ಕೊಟ್ಟಿದೆ. ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಸೂಚಿಸಿದೆ.
ಪ್ರಾಸಿಕ್ಯೂಷನ್ ಕುರಿತು ಎಐಸಿಸಿ ನಾಯಕರು ಕೂಡ ಸಿಎಂ ಸಿದ್ದರಾಮಯ್ಯಗೆ ದೂರವಾಣಿ ಕರೆ ಮಾಡಿದ್ದಾರೆ ಎನ್ನಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಉಸ್ತುವಾರಿ ಸುರ್ಜೇವಾಲ ಕರೆ ಮಾಡಿದ್ದು, ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದಾರೆ. ನಿಮ್ಮ ಜತೆ ನಾವಿದ್ದೇವೆ, ಧೈರ್ಯವಾಗಿರಿ. ಏನೇ ಆದರೂ ಕಾನೂನು ಹೋರಾಟ ನಡೆಸೋಣ ಎಂದು ಹೇಳಿದ್ದಾರೆ. ಈ ಮೂಲಕ ರಾಜಕೀಯ ಕಹಳೆ ಊದಿದ್ದಾರೆ.
ಈಗಾಗಲೇ ರಾಜ್ಯಪಾಲರ ನಿರ್ಧಾರ ಖಂಡಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಕಲಬುರಗಿ, ಚಿತ್ರದುರ್ಗ, ಹುಬ್ಬಳ್ಳಿ, ಮಂಡ್ಯ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ನಡೆದಿವೆ.