ಬೆಂಗಳೂರು : ನಗರದಲ್ಲಿ ಮತ್ತೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿನಿಯೊಬ್ಬಳ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಲು ಯತ್ನಿಸಿದ ಘಟನೆ ರಾಮಮೂರ್ತಿ ನಗರ ಬಳಿಯ ಹೊಯ್ಸಳ ನಗರದಲ್ಲಿ ನಡೆದಿದೆ.
ನೆನ್ನೆ ಸಂಜೆ ನಡೆದ ಘಟನೆಯಲ್ಲಿ ವಿದ್ಯಾರ್ಥಿನಿ ಮೇಘನಾ ಮೇಲೆ ಏಕಾಏಕಿ 15ಕ್ಕೂ ಹೆಚ್ಚು ಬೀದಿ ನಾಯಿಗಳು ಎರಗಿವೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ನಾಯಿಗಳ ಹಿಂಡು ಬೆನ್ನಟ್ಟಿದ್ದು, ಭಯದಿಂದ ಓಡಿದ ಮೇಘನಾ ಕೆಳಗೆ ಬಿದ್ದ ಪರಿಣಾಮ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಮೇಘನಾ ಪ್ರಾಣಾಪಾಯದಿಂದ ಪಾರಾಗಿದ್ದು, ಕೆ.ಆರ್ ಪುರಂ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಬಳಿಕ ಸ್ಥಳೀಯ ನಿವಾಸಿಗಳು ಬೀದಿ ನಾಯಿಗಳ ಹಾವಳಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಬೀದಿ ನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಕ್ಕಳು ಹಾಗೂ ಮಹಿಳೆಯರು ಹೊರಗೆ ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದು, ಕೂಡಲೇ ಕ್ರಮ ಕೈಗೊಳ್ಳೂವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಮೈಸೂರಲ್ಲಿ ಅಕ್ರಮ ಬೀಟೆ ಮರ ಸಾಗಾಟ ಪತ್ತೆ – ಓರ್ವ ಅರೆಸ್ಟ್.. ಲಕ್ಷಾಂತರ ಮೌಲ್ಯದ ದಿಮ್ಮಿಗಳು ವಶಕ್ಕೆ!


















