ಬೆಂಗಳೂರು : ಬೆಂಗಳೂರಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿರೋಧಿಸಿ ಬೀದಿ ಬದಿ ವ್ಯಾಪಾರಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಜಿಬಿಎ ವತಿಯಿಂದ ನಗರದ ವಿವಿಧ ಭಾಗಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದು, ಇದರಿಂದ ಜೀವನೋಪಾಯ ಕಳೆದುಕೊಂಡಿದ್ದೇವೆ ಎಂದು ಆರೋಪಿಸಿದ ವ್ಯಾಪಾರಿಗಳು ನಗರದ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಬೀದಿಬದಿ ವ್ಯಾಪಾರಿಗಳು, ಸರ್ಕಾರ ತಮ್ಮ ಜೀವನೋಪಾಯದ ಮಾರ್ಗವನ್ನೇ ಮುಚ್ಚಿದ್ದು, ತಮ್ಮನ್ನು ಬೀದಿಗೆ ತಳ್ಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ರಾಜ್ಯ ಸರ್ಕಾರ ಹಾಗೂ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ತೆರವು ಕಾರ್ಯಾಚರಣೆಯನ್ನು ತಕ್ಷಣ ಸ್ಥಗಿತಗೊಳಿಸಿ, ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ಬೀದಿಬದಿ ವ್ಯಾಪಾರಿಗಳು ಭಾಗವಹಿಸಿ ತಮ್ಮ ಅಹವಾಲುಗಳನ್ನು ಸರ್ಕಾರದ ಗಮನಕ್ಕೆ ತಂದರು.



















