ಉಡುಪಿ: ಜಿಲ್ಲೆಯಲ್ಲಿರುವ 9/11 ಎ ದಾಖಲೆ ಪಡೆಯುವ ಸಮಸ್ಯೆಗೆ ಸಂಬಂಧಪಟ್ಟಂತೆ ನಿಯಮಾವಳಿಯಲ್ಲಿ ಅಗತ್ಯ ವಿನಾಯಿತಿ ಕೊರುವ ಸಂಬಂಧ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಜಿಲ್ಲಾಡಳಿತಕ್ಕೆ ಸೂಚಿನೆ ನೀಡಿದ್ದಾರೆ.
ಉಡುಪಿ ಜಿ.ಪಂ.ನ ಡಾ| ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಸಿಂಧೂರಿ ಮಾತನಾಡಿದರು.
ಜಿಲ್ಲೆಯಲ್ಲಿ ಸಾರ್ವಜನಿಕರು ನೂತನ ಕಟ್ಟಡ ಕಾಮಗಾರಿ ಮಾಡಲು ಅಗತ್ಯವಿರುವ 9/11 ಎ ದಾಖಲೆ ಪಡೆಯುವುದಕ್ಕೆ ಕೆಲವು ನಿಯಮಾವಳಿಗಳಿಂದ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ನಿಯಮಾವಳಿಯಲ್ಲಿ ಕೆಲವೊಂದು ವಿನಾಯಿತಿ ನೀಡಿದ್ದಲ್ಲಿ ಸಮಸ್ಯೆ ಪರಿಹರಿಸಬಹುದು. ಈ ಬಗ್ಗೆ ಸರ್ಕಾರಕ್ಕೆ ಕೂಡಲೇ ಪ್ರಸ್ತಾವನೆ ಕಳುಹಿಸಿ ಎಂದಿದ್ದಾರೆ.
ಭಾರಿ ಮಳೆಯಿಂದಾಗಿ ಹದಗೆಟ್ಟ ರಸ್ತೆಯ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಮಾಡುವುದರೊಂದಿಗೆ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಹೇಳಿದರಲ್ಲದೇ, ಈಗಾಗಲೇ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೈಗೊಂಡಿರುವ ಕಾಲುಸಂಕ ನಿರ್ಮಾಣ ಕಾಮಗಾರಿಗಳನ್ನು ಮಳೆ ಕಡಿಮೆಯಾದ ಕೂಡಲೇ ಪುನರಾರಂಭಿಸಿ, ಶೀಘ್ರವಾಗಿ ಕಾಮಗಾರಿಗಳನ್ನು ಆದ್ಯತೆಯ ಆಧಾರದಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿ.ಪಂ ಸಿಇಒ ಪ್ರತೀಕ್ ಬಾಯಲ್ ಸೇರಿ ಪ್ರಮುಖ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.