ಕೋಲಾರ: ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ಕೊತ್ತೂರು ಮಂಜುನಾಥ್, ಪರಿಶಿಷ್ಟ ಜಾತಿಯ ಬುಡುಗ ಜಂಗಮ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು.
ಆದರೆ ಅವರು ಬುಡುಗ ಜಂಗಮ ಜಾತಿಗೆ ಸೇರಿಲ್ಲ ಎಂದು ತೀರ್ಪು ನೀಡಿದ್ದ ಹೈಕೋರ್ಟ್, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಇದರ ಆಧಾರದ ಮೇಲೆ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದಡಿ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಇದರಿಂದ ಶಾಸಕರಿಗೆ ಸಂಕಷ್ಟ ಎದುರಾಗಿದೆ.

















