ನವ ದೆಹಲಿ : ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಗುಜರಾತ್‌ನ ಜಾಮ್‌ನಗರದಲ್ಲಿರುವ ‘ವಂತಾರಾ’ ಪ್ರಾಣಿಗಳ ಸಂರಕ್ಷಣೆ ಹಾಗೂ ಪುನರ್ವಸತಿ ಕೇಂದ್ರದ ವ್ಯವಹಾರಗಳ ಬಗ್ಗೆ ತನಿಖೆಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಚೆಲಮೇಶ್ವರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ.
ಸಿಆರ್ ಜಯಾ ಸುಕಿನ್ ಎಂಬ ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ನ್ಯಾಯಪೀಠ ಈ ಆದೇಶವನ್ನು ಹೊರಡಿಸಿದೆ.
ಉತ್ತರಾಖಂಡ ಮತ್ತು ತೆಲಂಗಾಣ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್, ಮುಂಬೈನ ಮಾಜಿ ಪೊಲೀಸ್ ಆಯುಕ್ತರಾದ ಹೇಮಂತ್ ನಾಗ್ರಾಲೆ, ಕಸ್ಟಮ್ಸ್ ಹೆಚ್ಚುವರಿ ಆಯುಕ್ತರಾದ ಅನೀಶ್ ಗುಪ್ತಾ ಅವರನ್ನು ಎಸ್‌ಐಟಿಗೆ ಸುಪ್ರೀಂ ಕೋರ್ಟ್ ನೇಮಕ ಮಾಡಿದೆ.
“ಭಾರತ ಮತ್ತು ವಿದೇಶಗಳಿಂದ ಪ್ರಾಣಿಗಳನ್ನು ವಿಶೇಷವಾಗಿ ಆನೆಗಳನ್ನು ತರಿಸುವ ವೇಳೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳ ಅನುಸರಣೆ ಬಗ್ಗೆ ತನಿಖೆ ನಡೆಸಬೇಕು” ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.



















