ಶ್ರೀಲಂಕಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ ತಂಡ ಭರ್ಜರಿಯಾಗಿ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ನಡೆಸಿದ್ದು, ಕೇವಲ 22 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಯಾದವ್, ತಮ್ಮ ಹೆಸರಿಗೆ ದಾಖಲೆಯೊಂದನ್ನು ಬರೆಯಿಸಿಕೊಂಡಿದ್ದಾರೆ.
ಟಾಸ್ ಗೆದ್ದ ಶ್ರೀಲಂಕಾ ತಂಡವು ಭಾರತಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು. ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶುಭ್ಮನ್ ಗಿಲ್ (34) ಹಾಗೂ ಯಶಸ್ವಿ ಜೈಸ್ವಾಲ್ (40) ಸ್ಪೋಟಕ ಆಟದಿಂದಾಗಿ ಉತ್ತಮ ಆರಂಭ ಪಡೆಯಿತು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಲಂಕಾ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕೊನೆಗೆ 26 ಎಸೆತಗಳನ್ನು ಎದುರಿಸಿ 2 ಭರ್ಜರಿ ಸಿಕ್ಸ್ ಹಾಗೂ 8 ಬೌಂಡರಿಗಳೊಂದಿಗೆ 58 ರನ್ ಗಳಿಸಿದರು. ಈ ಮೂಲಕ ಯಾದವ್ ಟಿ20 ಕ್ರಿಕೆಟ್ ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದರು. ಅದೂ 200+ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸುವ ಮೂಲಕ ಎಂಬುವುದು ವಿಶೇಷ.
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 200+ ಸ್ಟ್ರೈಕ್ ರೇಟ್ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿದ ವಿಶ್ವ ದಾಖಲೆ ಸದ್ಯ ಯಾದವ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್ ವೆಲ್ ಹೆಸರಿನಲ್ಲಿತ್ತು. 104 ಟಿ20 ಇನಿಂಗ್ಸ್ ಆಡಿರುವ ಗ್ಲೆನ್ ಮ್ಯಾಕ್ಸ್ವೆಲ್ ಒಟ್ಟು 8 ಬಾರಿ 200+ ಸ್ಟ್ರೈಕ್ ರೇಟ್ ನಲ್ಲಿ ಅರ್ಧಶತಕಕ್ಕಿಂತ ಹೆಚ್ಚಿನ ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಸೂರ್ಯಕುಮಾರ್ ಯಾದವ್ ಭಾರತದ ಪರ ಒಟ್ಟು 66 ಟಿ20 ಪಂದ್ಯ ಆಡಿದ್ದಾರೆ. ಈ ವೇಳೆ 9 ಬಾರಿ 200+ ಸ್ಟ್ರೈಕ್ ರೇಟ್ನಲ್ಲಿ 50 ಕ್ಕಿಂತ ಹೆಚ್ಚಿನ ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 200+ ಸ್ಟ್ರೈಕ್ ರೇಟ್ನಲ್ಲಿ 50+ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಗೆ ಈಗ ಸೂರ್ಯ ಪಾತ್ರರಾಗಿದ್ದಾರೆ.