ಬೆಳಗಾವಿ: 2025ರ ಫೆಬ್ರವರಿ ಅಂತ್ಯದೊಳಗೆ ಶಾಲಾ ಶಿಕ್ಷಣ ಇಲಾಖೆಯಿಂದ ಸಹ ಶಿಕ್ಷಕರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ ಪ್ರಕಟಿಸಲಾಗುತ್ತದೆ. ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬುದು ಪ್ರೌಢಶಾಲಾ ಸಹ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದೆ. ಆದರೂ ಇಲಾಖೆ ಗಮನ ಹರಿಸುತ್ತಿಲ್ಲ ಎಂದು ಸಂಕನೂರು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಯುತ್ತಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿ ತಯಾರಿಸಲು ಪತ್ರ ಬರೆಯಲಾಗಿದೆ. ಹೀಗಾಗಿ ಪದೋನ್ನತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದಿದ್ದಾರೆ.