ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಗೆ ಪ್ರಾರಂಭಕ್ಕೂ ಮುನ್ನವೇ ಬಿರುಬಿಸಿಲಿನ ತಾಪಕ್ಕೆ ಜನತೆ ಬಳಲುತ್ತಿದ್ದಾರೆ. ಪ್ರತಿನಿತ್ಯ ಸರಾಸರಿ ಒಂದು ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಳವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದಲ್ಲೂ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಉತ್ತರ ಕರ್ನಾಟಕ ಭಾಗದಲ್ಲೂ ಉಷ್ಣಾಂಶ ಹೆಚ್ಚಾಗಿದ್ದು, ಕಲಬುರಗಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನವೇ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ತಲುಪಿದೆ.
ಅದೇ ರೀತಿ ತುಮಕೂರು, ಚಿತ್ರದುರ್ಗ, ಕಾರವಾರ, ರಾಯಚೂರು ಹಾಗೂ ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನೂ ಓದಿ : ಬೆಂಗಳೂರು | ಶೀಘ್ರದಲ್ಲೇ ಮತ್ತೊಂದು ನೈಸ್ ರಸ್ತೆ ಸಂಚಾರಕ್ಕೆ ಮುಕ್ತ..!


















