ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಈಗಾಗಲೇ ದರ್ಶನ್ ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಾಡಿದ್ದಾರೆ. ದರ್ಶನ್ ಅವರ ಪರವಾಗಿ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದಾರೆ. ಡಿಸೆಂಬರ್ 11ಕ್ಕೆ ದರ್ಶನ್ ಅವರ ಶಸ್ತ್ರ ಚಿಕಿತ್ಸೆಗೆ ದಿನಾಂಕ ನಿಗದಿ ಆಗಿದ್ದು, ಈ ಕುರಿತು ಮಾಹಿತಿ ನೀಡಲಾಗಿದೆ. ಹೀಗಾಗಿ ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಲ್ಲಿಯವರೆಗೂ ದರ್ಶನ್ ಯಾವ ಕಾರಣಕ್ಕೆ ಸರ್ಜರಿ ಮಾಡಿಸಿಲ್ಲ ಎಂಬುವುದಕ್ಕೆ ಅವರ ಪರ ವಕೀಲರು ಉತ್ತರ ನೀಡಿದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಇದುವರೆಗೂ ನೀಡಿಲ್ಲ ಎಂದಿದ್ದಾರೆ.
ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವ ಹಿನ್ನೆಲೆಯಲ್ಲಿ ದರ್ಶನ್ಗೆ 6 ವಾರಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಅವರ ಜಾಮೀನು ಅವಧಿ ಡಿಸೆಂಬರ್ 11ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ ವಿಸ್ತರಣೆಗಾಗಿ ಮನವಿ ಮಾಡಲಾಗಿತ್ತು. ಈಗ ಜಾಮೀನು ಅವಧಿ ವಿಸ್ತರಣೆ ಆಗಿದ್ದು, ದರ್ಶನ್ ನಿಟ್ಟುಸಿರು ಬಿಟ್ಟಿದ್ದಾರೆ.
















