ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆಯ ದಿನ ಟೆನ್ಶನ್ ದಿನವಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆಯನ್ನು ಸಂಪೂರ್ಣವಾಗಿ ಮುಗಿಸಿರುವ ಕೋರ್ಟ್, ನಾಳೆ ಆದೇಶ ಪ್ರಕಟಿಸಲಿದೆ. ಪೋಕ್ಸೋ ಪ್ರಕರಣ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೂಡ ಪೂರ್ಣಗೊಂಡಿದ್ದು, ಕೋರ್ಟ್ ತೀರ್ಪು ಪ್ರಕಟಿಸಲಿದೆ.
ನಿರೀಕ್ಷಣಾ ಜಾಮೀನು ಕುರಿತು ಕೂಡ ಕೋರ್ಟ್ ತೀರ್ಮಾನಿಸಲಿದೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣದ ದೋಷಾರೋಪ ಪಟ್ಟಿಯನ್ನು ಈಗಾಗಲೇ ಸಿಐಡಿ ಪೊಲೀಸರು ದಾಖಲಿಸಿದ್ದಾರೆ. ಖುದ್ದು ಹಾಜರಾತಿಯಿಂದ ಬಿಎಸ್‌ವೈಗೆ ಕೋರ್ಟ್ ಅನುಮತಿ ನೀಡಿತ್ತು. ಅಲ್ಲದೇ ಬಂಧನದಿಂದಲೂ ಮಧ್ಯಂತರ ರಕ್ಷಣೆ ನೀಡಿತ್ತು. ಆದರೆ, ನಾಳೆ ಎಲ್ಲ ಭವಿಷ್ಯ ತಿಳಿಯಲಿದೆ.
ಧಾರವಾಡ ಹೈಕೋರ್ಟ್ ಪೀಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣದ ತೀರ್ಪು ಪ್ರಕಟವಾಗುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ನಾಳೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ತೀರ್ಪು ಹೊರಬೀಳಲಿದೆ. ಹೀಗಾಗಿ ಇಬ್ಬರೂ ನಾಯಕರಿಗೆ ಟೆನ್ಶನ್ ಶುರುವಾಗಿದೆ.