ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ಭೀಕರ ದಾಳಿಗೆ 26 ಪ್ರವಾಸಿಗರು ಮೃತಪಟ್ಟಿದ್ದಾರೆ. ಘಟನೆಯ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ದೇಶದ ನಾಗರಿಕರನ್ನು ಹತ್ಯೆಗೈದ ಉಗ್ರರನ್ನು ಕೊಂದು ಹಾಕಬೇಕು ಎಂದು ಜನ ಆಗ್ರಹಿಸುತ್ತಿದ್ದಾರೆ. ಸೇಡು ತೀರಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಸೌದಿ ಅರೇಬಿಯಾ ಪ್ರವಾಸವನ್ನು ಅರ್ಧಕ್ಕೇ ಮೊಟಕುಗೊಳಿಸಿ ಭಾರತಕ್ಕೆ ಹಿಂದಿರುಗಿದ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಪಹಲ್ಗಾಂನಲ್ಲಿ ನಡೆದ ಭೀಕರ ದಾಳಿಯ ಕುರಿತು ಇಂಚಿಂಚೂ ಮಾಹಿತಿಯನ್ನು ನರೇಂದ್ರ ಮೋದಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸೇರಿ ಹಲವು ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಪಹಲ್ಗಾಂನಲ್ಲಿ ನಡೆದ ಉಗ್ರರ ಭೀಕರ ದಾಳಿಯಲ್ಲಿ ಕರ್ನಾಟಕದ ಇಬ್ಬರು ನಾಗರಿಕರು, ಯುಎಇ ಹಾಗೂ ನೇಪಾಳದ ತಲಾ ಒಬ್ಬರು ಸೇರಿ 26 ಜನ ಮೃತಪಟ್ಟಿದ್ದಾರೆ.
ಕಾಶ್ಮಿರದಲ್ಲಿ ನಡೆದ ದಾಳಿಯ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ದಾಳಿಯ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಉಗ್ರರ ಆಶಯಗಳು ಎಂದಿಗೂ ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಿಂದ ಸಚಿವ ಸಂತೋಷ್ ಲಾಡ್ ಅವರು ಕೂಡ ಕಾಶ್ಮೀರಕ್ಕೆ ತೆರಳಿದ್ದು, ಮೃತಪಟ್ಟ ಕನ್ನಡಿಗರ ಶವಗಳನ್ನು ಕರ್ನಾಟಕಕ್ಕೆ ತರಲು ವ್ಯವಸ್ಥೆ ಮಾಡುತ್ತಿದ್ದಾರೆ.



















