ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ಈಗ ಅವರಿಗೆ ತಲೆನೋವಾಗಿ ಪರಿಣಮಿಸಿದೆ.
ಹೈಕೋರ್ಟ್ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್, ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ.
ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ (Karnataka Highcourt) ನೀಡಿದ ತೀರ್ಪಿನ ವಿರುದ್ಧ ಸಚಿವ ಜಮೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಹೀಗಾಗಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿಜೆ ಅಬ್ರಾಹಂ ರಾಜ್ಯಪಾಲರಿಗೆ ದೂರು ನೀಡಿದ್ದರು. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ, ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ತೀರ್ಪಿನ ಬಗ್ಗೆ ಜಮೀರ್ ಅಸಮಾಧಾನ ವ್ಯಕ್ತಪಡಿಸಿದ್ದರು.
ತೀರ್ಪು ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದಿದ್ದರು. ಹೀಗಾಗಿ ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ನ್ನು ಟಿ.ಜೆ. ಅಬ್ರಾಹಂ ದಾಖಲಿಸಿದ್ದರು. ಅಲ್ಲದೇ, ರಾಜ್ಯಪಾಲರಿಗೂ ದೂರು ನೀಡಿದ್ದರು. ಹೀಗಾಗಿ ರಾಜ್ಯಪಾಲರು ಕ್ರಮಕ್ಕೆ ಸೂಚಿಸಿದ್ದಾರೆ.