ಬೆಂಗಳೂರು: ಮಹಿಳೆಯೊಬ್ಬರು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯ ರಾಮಯ್ಯ ಲೇಔಟ್ ನಲ್ಲಿ ನಡೆದಿದೆ. ಶೃತಿ(33) ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಐದು ವರ್ಷದ ಮಗಳು ರೋಶಿಣಿಯನ್ನು ಕೊಂದು ತಾನೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಭಾನುವಾರ ಸಂಜೆ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶೃತಿ ಬ್ಯಾಡನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿದ್ದಾರೆ. ಅವರು ಆಡಿಟಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನು ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದರು.
ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ಮಗ ಮನೆಯ ಹೊರಗೆ ಆಡುತ್ತಿದ್ದರೆ, ಪತಿ ಮನೆಯಿಂದ ಹೊರಗೆ ಹೋಗಿದ್ದರು. ಆಟ ಆಡಿ ಮಗ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಪತಿ ಬೇರೊಬ್ಬರೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದಾಗಿ ಮನನೊಂದು ಶೃತಿ ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತಿ ಗೋಪಾಲಕೃಷ್ಣಗಾಗಿ ಹುಡುಕಾಟ ನಡೆಸುತ್ತಿದ್ದಾರೆ.