ವಿಜಯನಗರ:ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ಗ್ರಾಮಸ್ಥರು ಹಾಗೂ ಕುರಿಗಾಹಿಗಳಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಸೆರೆಹಿಡಿದಿದ್ದಾರೆ.
ಕೂಡ್ಲಿಗಿ ಪಟ್ಟಣದ ಶ್ರೀಸಿದ್ದಯ್ಯನಗುಡ್ಡದ ಬಳಿ ಮರದ ಮೇಲೆ ಚಿರತೆ ಕುಳಿತಿರುವುದು ಕಂಡುಬಂದಿತ್ತು. ಅಲ್ಲದೆ, ಕುರಿಗಾಹಿಗಳ ಸುತ್ತಮುತ್ತಲೂ ಚಿರತೆ ಓಡಾಡುತ್ತಿದ್ದರಿಂದ ಸ್ಥಳೀಯರಲ್ಲಿ ಭೀತಿ ಹೆಚ್ಚಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಅರಣ್ಯಾಧಿಕಾರಿ ಸಂದೀಪ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ.
ಬಳಿಕ ಸೆರೆಸಿಕ್ಕ ಚಿರತೆಯನ್ನು ಸುರಕ್ಷಿತವಾಗಿ ಬೇರೆ ಪ್ರದೇಶದ ದಟ್ಟಾರಣ್ಯಕ್ಕೆ ಸ್ಥಳಾಂತರಿಸಲಾಗಿದೆ. ಇದರಿಂದ ಆತಂಕದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.


















