ಬೆಂಗಳೂರು: ರಾಜ್ಯದ ಹಲವೆಡೆ ಈಗಾಗಲೇ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಇನ್ನೂ ಕೆಲವು ದಿನ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಈಗಾಗಲೇ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆಂಧ್ರ ಪ್ರದೇಶದ ಕರಾವಳಿಯಲ್ಲಿ ಸರ್ಕ್ಯುಲೇಷನ್ ಇರುವುದರಿಂದಾಗಿ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 17 ರಿಂದ ಅಕ್ಟೋಬರ್ 21 ರವರೆಗೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಹಲವು ಕಡೆ ಮಳೆಯಾಗುವ ಸಾಧ್ಯತೆ ಇರುವುದರಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಅಕ್ಟೋಬರ್ 17 ರಿಂದ ಅಕ್ಟೋಬರ್ 19 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಅಕ್ಟೋಬರ್ 21 ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ರಾಜಧಾನಿಯಲ್ಲಿ ಇನ್ನೂ ನಾಲ್ಕು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಡಿಕೆ ಪ್ರಕಾರ ಅ.1ರಿಂದ 16ರವರೆಗೆ ರಾಜಧಾನಿಯಲ್ಲಿ82 ಮಿ.ಮೀ. ಮಳೆಯಾಗಬೇಕಿತ್ತು, ಬದಲಿಗೆ 124.8 ಮಿ.ಮೀ. ಮಳೆಯಾಗಿದೆ. ಈ ಬಾರಿ ಇಲ್ಲಿಯವರೆಗೆ ಬೆಂಗಳೂರು ನಗರದಲ್ಲಿ ಶೇ.19ರಷ್ಟು ಅಧಿಕ ಮಳೆಯಾಗಿದೆ.