ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ವಿಪರೀತವಾಗಿ ಹೆಚ್ಚಾಗಿದೆ. ಹಲವೆಡೆಯಂತೂ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಈ ಮಧ್ಯೆ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಇಂದು ಕೂಡ ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ. ನಾಳೆಯೂ ಬೆಂಬಿಡದೆ ಮಳೆಯಾಗಲಿರುವ ಮುನ್ಸೂಚೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ ಅಷ್ಟೇ ಅಲ್ಲದೇ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಆಗಸ್ಟ್ 1ರ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನುಳಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರದಲ್ಲಿ ಆಗಸ್ಟ್ 1ರ ವರೆಗೆ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಹರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗಡಿ ಭಾಗದ ಬೆಳಗಾವಿಯಲ್ಲಿ ನದಿ ತೀರದಲ್ಲಿ ಪ್ರವಾಹ ಹೆಚ್ಚಾಗಿದೆ. ಚಿಕ್ಕೋಡಿ ಉಪವಿಭಾಗದಲ್ಲಿ 7 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 137 ಕಡೆ ಕೇಂದ್ರ ಆರಂಭಿಸಲು ಸೂಕ್ತ ಸ್ಥಳ ಗುರುತಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಹಲವಾರು ಜನರನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.