ಬೆಂಗಳೂರು: ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು, ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಉದ್ಯಮಿಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ನಗರದ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ, ಅವರ ಅಹವಾಲುಗಳನ್ನು ಆಲಿಸಿ ಮಾತನಾಡಿದ ಡಿಸಿಎಂ ಡಿ. ಕೆ. ಶಿವಕುಮಾರ್, ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು, ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.
ನಗರದಾದ್ಯಂತ ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ ನಮಗೆ ಅವಕಾಶ ನೀಡಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ. ದೆಹಲಿ, ಮುಂಬೈ ಸೇರಿದಂತೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ರಸ್ತೆಗಳ ಸಮಸ್ಯೆಗಳನ್ನು ನಾವು ತೋರಿಸುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ನಿತ್ಯ ಮೂರು ಸಾವಿರ ವಾಹನಗಳು ನೋಂದಣಿಯಾಗುತ್ತಿವೆ. ಜನಸಂಖ್ಯೆ 1.40 ಕೋಟಿ ಮುಟ್ಟಿದೆ. 70 ಲಕ್ಷ ಮಂದಿ ಪ್ರತಿದಿನ ಹೊರಗಿನಿಂದ ಬಂದು ಹೋಗುತ್ತಿದ್ದಾರೆ. ಉದ್ಯೋಗ, ಶಿಕ್ಷಣ, ವಹಿವಾಟು, ಉದ್ದಿಮೆ ಹೀಗೆ ಅನೇಕ ಕೆಲಸಗಳಿಗಾಗಿ ಬೆಂಗಳೂರನ್ನು ಅವಲಂಬಿಸಿದ್ದಾರೆ ಎಂದು ತಿಳಿಸಿದ್ದಾರೆ.
“ಬೆಂಗಳೂರಿನ ಅಭಿವೃದ್ಧಿಗೆ 1.04 ಲಕ್ಷ ಕೋಟಿ ಮೊತ್ತದ ಯೋಜನೆಗಳು“
ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಟನಲ್ ರಸ್ತೆ, ಎಲಿವೆಟೆಡ್ ಕಾರಿಡಾರ್, ಡಬಲ್ ಡೆಕ್ಕರ್, ಬಫರ್ ರಸ್ತೆ, ನಗರ ಸೌಂದರ್ಯ ಹೆಚ್ಚಿಸಲು ದೀಪಾಲಂಕಾರ, ಬೀದಿ ದೀಪಗಳಿಗೆ ಎಲ್ಇಡಿ ಬಲ್ಬ್ ಅಳವಡಿಕೆ ಸೇರಿದಂತೆ, ಮುಂದಿನ ನಾಲ್ಕೈದು ವರ್ಷಗಳಲ್ಲಿ 1.04 ಲಕ್ಷ ಕೋಟಿಯಷ್ಟು ಅಭಿವೃದ್ಧಿ ಯೋಜನೆ ರೂಪಿಸಿದ್ದೇವೆ ಎಂದು ತಿಳಿಸಿದ್ದಾರೆ.
ಜನರ ಬಳಿಗೆ ಸರ್ಕಾರವನ್ನು ಕರೆದೊಯ್ಯಬೇಕು ಎಂಬ ಕಾರಣಕ್ಕೆ ನಾವು ನಗರದಲ್ಲಿ ಐದು ಪಾಲಿಕೆ ರಚಿಸಿದ್ದೇವೆ. ನೀವು ಇಂದು ಕೊಟ್ಟಿರುವ ಅಹವಾಲು ಹಾಗೂ ಸಲಹೆಗಳನ್ನು ನಮ್ಮ ಅಧಿಕಾರಿಗಳು ದಾಖಲಿಸಿಕೊಂಡಿದ್ದು, ಅವರು ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನಿಮ್ಮ ಅಹವಾಲು ಏನೇ ಇದ್ದರೂ 1533 ಸಹಾಯವಾಣಿಗೆ ಕರೆ ಮಾಡಿ ಎಂದು ಹೇಳಿದ್ದಾರೆ.