ಬೆಂಗಳೂರು : ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದು ಕೂಡ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಕಲಬುರ್ಗಿ, ವಿಜಯಪುರ, ಗದಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಈ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇನ್ನೊಂದೆಡೆ, ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡು ಭಾಗದ ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವಾಮಾನ ಇರುವ ಸಾಧ್ಯತೆ ಇದೆ. ಮಳೆಯಿರುವ ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.



















