ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪಚ್ಚೆದೊಡ್ಡಿತಾಂಡಾ ನಿವಾಸಿಗಳಾದ ಪಚ್ಚೆಮಲ್ಲು ಮತ್ತು ಮಂಜುನಾಥ ಎಂಬುವವರನ್ನು ಜಿಲ್ಲೆಯ ಹನೂರು ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಹುಲಿಗೆ ವಿಷಪ್ರಾಶನ ಮಾಡಿ ಕೊಂದಿರುವುದಾಗಿ ತಿಳಿದುಬಂದಿದೆ.
ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಮಾತನಾಡಿ, ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯ ವ್ಯಾಪ್ತಿಯಲ್ಲಿ ನಡೆದಿರುವ ಮತ್ತೊಂದು ಹುಲಿ ಹತ್ಯೆಯಿಂದ ತುಂಬಾ ನೋವಾಗಿದೆ. ಈಗಾಗಲೇ ಹನೂರು ವಲಯ ಅರಣ್ಯಾಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತು ಪ್ರಾಥಮಿಕ ಮಾಹಿತಿ ಪ್ರಕಾರ ಹುಲಿಗೆ ವಿಷಪ್ರಾಶನ ಮಾಡಿ ಕೊಂದಿರುವುದಾಗಿ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಸದ್ಯ ವಶಕ್ಕೆ ಪಡೆದಿರುವ ಶಂಕಿತ ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳದಲ್ಲಿ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಕೃತ್ಯದಲ್ಲಿ ಯಾರೆಲ್ಲಾ ಸಾಥ್ ನೀಡಿದ್ದಾರೆ, ಹುಲಿಯನ್ನು ಕೊಂದಿದ್ದು ಹೇಗೆ ಎಂಬುದರ ಕುರಿತು ವಿಚಾರಣೆ ಮಾಡಲಾಗುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.



















