ಮೈಸೂರು : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಸಂಭವಿಸಿದೆ. ಚಲಿಸುತ್ತಿದ್ದ ಬೈಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿವೆ.
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮಡುವಿನಹಳ್ಳಿಯ ಮಹದೇವಸ್ವಾಮಿ ತಮ್ಮ ಪತ್ನಿ, ಮಗಳು ಹಾಗೂ ಮಗನೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಬೈಕ್ ಚಲಿಸುತ್ತಿದ್ದಾಗ ಏಕಾಏಕಿ ಟಯರ್ ಬ್ಲಾಸ್ಟ್ ಆಗಿದ್ದು, ವಾಹನ ನಿಯಂತ್ರಣ ತಪ್ಪಿ ನಾಲ್ವರೂ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮವಾಗಿ ಎಲ್ಲರೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಾರ್ಗ ಮಧ್ಯೆ ಮಹದೇವಸ್ವಾಮಿ ಅವರ ಪುತ್ರಿ ಸಿಂಚನ (16) ಕೊನೆಯುಸಿರೆಳೆದಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ಸಿಂಚನ ಸಾವಿನಿಂದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಗಾಯಗೊಂಡ ಮೂವರಿಗೆ ನಂಜನಗೂಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಅಥಣಿಯಲ್ಲಿ ಭಾರಿ ಗಾಳಿ ಮಳೆ.. ಧರೆಗುರುಳಿದ ಮರ, ವಿದ್ಯುತ್ ಕಂಬಗಳು!


















