ಚಿತ್ರದುರ್ಗ: ಟೈಯರ್ ಬ್ಲಾಸ್ಟ್ ಆದ ಪರಿಣಾಮ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಈ ಘಟನೆ ನಡೆದಿದೆ. ಅರ್ಜುನ್ (28) , ಸರವಣ್ (30) , ಶ್ರೀಧರ್ (30) ಸಾವನ್ನಪ್ಪಿರುವ ದುರ್ದೈವಿಗಳು ಎನ್ನಲಾಗಿದೆ. ಮೃತ ಅರ್ಜುನ್ ತಮಿಳುನಾಡು ಮೂಲದ ಪೊಲೀಸ್ ಪೇದೆ ಎನ್ನಲಾಗಿದೆ. ಮೃತರು ಗಾಯಾಳುಗಳು ತಮಿಳುನಾಡಿನ ಕೃಷ್ಣಗಿರಿ ಮೂಲದವರು ಎಂದು ತಿಳಿದು ಬಂದಿದೆ.
ಘಟನೆಯಲ್ಲಿ 6 ಜನರು ಗಾಯಗೊಂಡಿದ್ದು, ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರು ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲೇ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.