ಶಿವಮೊಗ್ಗ: ರಾಜಕೀಯ ನಾಯಕರ ಆಶ್ವಾಸನೆಗಳಿಗೆ ಬೇಸತ್ತು ಮುಂಬರುವ ಚುನಾವಣೆಗಳಲ್ಲಿ ಮತದಾನವನ್ನು ಬಹಿಷ್ಕರಿಸಲು ನಿರ್ಧಾರಿಸಿ, ಗ್ರಾಮಸ್ಥರೆಲ್ಲಾ ಒಗ್ಗೂಡಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಹಾಗೂ ಮುಂಬಾರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಈ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹಾಗೂ ಹಿಂದುಳಿದ ಕುಟುಂಬಗಳು ವಾಸಿಸುತ್ತಿದ್ದು, ಸರ್ಕಾರದ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗ್ರಾಮಸ್ಥರೆಲ್ಲಾ ಒಗ್ಗೂಡಿ ಗೌಡಕೊಪ್ಪ – ದೊಡ್ಲಿಮನೆ ಸಂಪರ್ಕ ರಸ್ತೆಯನ್ನು ದುರಸ್ತಿ ಕಾರ್ಯ ಮಾಡಲು ಮುಂದಾಗಿದ್ದಾರೆ.
ಪ್ರತಿದಿನ ಹತ್ತಾರು ಶಾಲಾ ಮಕ್ಕಳು, ವಯೋವೃದ್ಧರು, ಅನಾರೋಗ್ಯ ಪೀಡಿತ ಗ್ರಾಮಸ್ಥರು, ಆಸ್ಪತ್ರೆ, ಕಚೇರಿಗಳಿಗೆ ತೆರಳಲು ಇರುವ ಒಂದೇ ರಸ್ತೆ ಇದಾಗಿದ್ದು, ಜಿಲ್ಲಾಧಿಕಾರಿಗಳು ಈ ಪ್ರದೇಶಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಮೂಲಭೂತ ಸೌಲಭ್ಯ ಒದಗಿಸಬೇಕು ಹಾಗೂ ಇಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ತಪ್ಪಿದಲ್ಲಿ ಮುಂಬರುವ ದಿನಗಳಲ್ಲಿ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಶಾಂತಿನಗರದಲ್ಲಿ ಬೈಕ್ ಸವಾರನ ಸುಲಿಗೆ ಕೇಸ್ | ಮೂವರು ಆರೋಪಿಗಳ ಬಂಧನ



















