ವಿಜಯಪುರ : ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಡೆದಿದೆ.
ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ.
ಗುರುನಾಥ್ ಅವರು ತಮ್ಮ ಸ್ವಂತ ಮನೆಯನ್ನು ದುರಸ್ತಿ ಮಾಡುತ್ತಿದ್ದ ಕಾರಣ, ಈ ಕುಟುಂಬವು ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇತ್ತು. ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಹಳೆಯ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದ್ದರಿಂದ ಮನೆಯೊಳಗೆ ಮಲಗಿದ್ದ ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅವಶೇಷಗಳ ಅಡಿಯಲ್ಲಿದ್ದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆಯಿಂದ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ : ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಶಾಕ್ ; ಪೆಟ್ರೋಲ್-ಡೀಸೆಲ್ ದರ ಭಾರೀ ಏರಿಕೆ.. ಲೀಟರ್‌ಗೆ ಎಷ್ಟು ಗೊತ್ತಾ?



















