ಚಿತ್ರದುರ್ಗ: ಸಾರಿಗೆ ಬಸ್ ವೊಂದು ರಸ್ತೆ ಪಕ್ಕದಲ್ಲಿದ್ದ ನೇಮ್ ಬೋರ್ಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 26ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಶಹಪುರ ಮೂಲದ ನಿವಾಸಿ ಶಿವಪ್ಪ(36) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಖಂಡೆನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆಎಸ್ ಆರ್ ಟಿಸಿ ಬಸ್, ರಸ್ತೆ ಪಕ್ಕದಲ್ಲಿನ ಬೋರ್ಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾರಿಗೆ ಬಸ್ ಯಾದಗಿರಿಯಿಂದ ಚಳ್ಳಕೆರೆ ಮಾರ್ಗವಾಗಿ ತೆರಳುತ್ತಿತ್ತು ಎನ್ನಲಾಗಿದೆ. ಗಾಯಾಳುಗಳು ಚಳ್ಳಕೆರೆ ತಾಲ್ಲೂಕು ಹಾಗೂ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.