ಬೆಂಗಳೂರು: ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯಲು ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಈ ಬಗ್ಗೆ ಸಮಿತಿ ಪರ ವಕೀಲರು ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದ್ದಾರೆ.
ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು(ಮಂಗಳವಾರ) ಹೈಕೋರ್ಟ್‌ನ ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ ಜೋಷಿ ನೇತೃತ್ವದ ದ್ವಿಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಸರ್ಕಾರದ ಪರ ವಕೀಲರಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.
ನಿನ್ನೆ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಂಘಟನೆಯೊಂದಿಗೆ ಸಭೆ ಮಾಡಲಾಗಿದೆ. ನಿನ್ನೆ ರಾತ್ರಿಯಷ್ಟೇ ನೋಟಿಸ್ ಸಿಕ್ಕಿದೆ. ರಾಜಿ ಸಂಧಾನಕ್ಕೆ ಪ್ರಯತ್ನಗಳನ್ನುಮಾಡಲಾಗುತ್ತಿದೆ ಎಂದು ತಿಳಿಸಿದ್ದರು, ಇದಕ್ಕೆ ಮಾತುಕತೆ ಏನಾಗಿದೆ? ಎಂದು ಹೈಕೋರ್ಟ್ ಪ್ರಶ್ನಿಸಿತು. ಅದಕ್ಕೆ ಎಜಿ, ಈವೆರೆಗೆ ಸರ್ಕಾರ ನಡೆಸಿದ ಮಾತುಕತೆಗಳ ವಿವರ ನೀಡಿದರು. ಮುಂದುವರಿದು, ಇಂಡಸ್ಟ್ರಿಯಲ್ ಡಿಸ್ಪ್ಯೂಟ್ ಕಾಯ್ದೆಯಂತೆ ಸಂಧಾನ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬಳಿಕ ಸಾರಿಗೆ ಸಂಘಟನೆಗಳ ಪರ ವಕೀಲರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಸಿಜೆ ವಿಭು ಬಕ್ರು, ನ್ಯಾ.ಸಿ.ಎಂ.ಜೋಷಿ ನೇತೃತ್ವದ ಪೀಠ ನ್ಯಾಯಾಂಗ ನಿಂದನೆಯ ಎಚ್ಚರಿಕೆಯನ್ನು ನೀಡಿತು.
ಎಸ್ಮಾ (ಅಗತ್ಯ ಸೇವೆ ನಿರ್ವಹಣೆ ಕಾಯಿದೆ, 1968) ಜಾರಿಯಾಗಿದೆ. ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು. ಸಾರಿಗೆ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು. ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ, ಜನಸಾಮಾನ್ಯರನ್ನು ಒತ್ತೆಯಾಗಿರಿಸುವುದನ್ನು ಕೋರ್ಟ್ ಸಹಿಸುವುದಿಲ್ಲ ಎಂದು ಎಚ್ಚರಿಸಿತು.
ಮುಷ್ಕರ ನಿರ್ಧಾರ ಕಾನೂನು ಬಾಹೀರವಾಗಿದೆ. ಹೈಕೋರ್ಟ್ ಆದೇಶವಿದ್ದರೂ ನೀವು ಅದನ್ನು ಪಾಲಿಸಿಲ್ಲ. ಎಸ್ಮಾ ಕಾಯ್ದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿದೆ ಎಂಬುದನ್ನು ಕೋರ್ಟ್‌ಗೆ ಹೇಳಬೇಕು ಎಂದು ತಾಕೀತು ಮಾಡಿದರು. ಇದಕ್ಕೆ ಉತ್ತರಿಸಿದ ನೌಕರರ ಸಂಘಟನೆ ಪರ ವಕೀಲರು, ನಾಳೆ ಮುಷ್ಕರ ನಡೆಸುವುದಿಲ್ಲ ಎಂದು ಹೇಳಿದರು. ವಿಚಾರಣೆಯನ್ನು ಆಗಸ್ಟ್ 7ಕ್ಕೆ ಮುಂದೂಡಿ ಆದೇಶಿಸಿದೆ.



















