ಬೆಂಗಳೂರು: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು, ಐದು ಮಂದಿಯನ್ನು ಒಳಗೊಂಡ ಸಮಿತಿಯನ್ನು ರಚಿನೆ ಮಾಡಲಾಗಿದೆ.
ಎರಡನೇ ಭಾಷೆಯಾಗಿ ಘೋಷಣೆ ಮಾಡಲು ಅನುಸರಿಸಲಾಗುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಈ ಸಮಿತಿ ಆಂಧ್ರಪ್ರದೇಶಕ್ಕೆ ತೆರಳಲಿದೆ.
ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಅನುಸರಿಸಲಾಗುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಗಾಯಿತ್ರಿ ಕೆ.ಎಂ. ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಾನೂನು ಇಲಾಖೆ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್., ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ್ ಶೆಟ್ಟಿ ಅವರು ಸಮಿತಿಯ ಸದಸ್ಯರಾಗಿದ್ದಾರೆ.
ಇನ್ನು, ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.