ತುಮಕೂರು : ಜಿಲ್ಲೆಯ ಶಿರಾ ಸಮೀಪದ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರಾಕ್ಟರ್‌ನಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.
ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಟ್ರಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರಾಕ್ಟರ್‌ನಲ್ಲಿದ್ದ ಕೂಲಿ ಕಾರ್ಮಿಕರು ರಸ್ತೆಗೆ ಎಸೆಯಲ್ಪಟ್ಟಿದ್ದು, ಮಧ್ಯಪ್ರದೇಶ ಮೂಲದ ಬಾರಿಲಾಲ್ (46) ಹಾಗೂ ಛತ್ತೀಸ್ಗಢ ಮೂಲದ ಗೋಲು ಜೋಗಿ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಟ್ರಾಕ್ಟರ್‌ನಲ್ಲಿದ್ದ ಇನ್ನೂ ಹತ್ತು ಮಂದಿ ಕೂಲಿ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಶಿರಾ ಹಾಗೂ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿಯ ಪ್ರಕಾರ, ಮಧ್ಯಪ್ರದೇಶ, ಛತ್ತೀಸ್ಗಢ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ಚಾಲಕನ ವಿರುದ್ಧ ತನಿಖೆ ಮುಂದುವರಿಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!


















