ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಅನಾರೋಗ್ಯಕ್ಕೀಡಾಗಿದ್ದು, ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದಾರೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿಕಿತ್ಸೆ ಪಡೆದು ಗುಣಮುಖರಾದ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.
ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ನಿರಂತರ ಪ್ರವಾಸ, ಸಚಿವಾಲಯದ ಕೆಲಸ, ಪಕ್ಷ ಸಂಘಟನೆ ಸೇರಿ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿದ ಕಾರಣ ನಾಲ್ಕು ದಿನಗಳಿಂದ ಅನಾರೋಗ್ಯ ಅವರನ್ನು ಬಾಧಿಸುತ್ತಿದೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದಿರುವ ಅವರು ವೈದ್ಯರ ಸೂಚನೆ ಮೇರೆಗೆ ಚೆನ್ನೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಲೋಕಸಭೆ ಚುನಾವಣೆ ವೇಳೆಯೂ ಎಚ್.ಡಿ.ಕುಮಾರಸ್ವಾಮಿ ಅವರು ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಆಗಮಿಸಿದ್ದ ಅವರು ಕೆಲ ದಿನ ವಿಶ್ರಾಂತಿ ಪಡೆದಿದ್ದರು. ವಿಶ್ರಾಂತಿಯ ಬಳಿಕವೇ ಅವರು ರಾಜಕೀಯ ಚಟುವಟಿಕೆಗಳನ್ನು ಕೈಗೊಂಡಿದ್ದರು.