ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಮಹಿಳಾ ಆಯೋಗ ಪತ್ರ ಬರೆದಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ. ರವಿ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಬೆಳಗಾವಿ ಜೆಎಂಎಫ್ ಸಿ ಕೋರ್ಟ್, ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿತು. ಈ ಮಧ್ಯೆ ಸಿ.ಟಿ. ರವಿ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರು ಪಡಿಸಲು ಪೊಲೀಸರು ಮುಂದಾಗಿದ್ದಾರೆ.
ಈಗಾಗಲೇ ಈ ಪ್ರಕರಣದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಅವರು ಆ ಪದ ಬಳಕೆ ಮಾಡಿದ್ದಾರೆ. ಇದರಿಂದ ನನಗೆ ಶಾಕ್ ಆಗಿದೆ. ನಾನು ತುಂಬಾ ಆಘಾತಕ್ಕೊಳಗಾಗಿದ್ದೇನೆ ಎಂದು ಕಣ್ಣೀರು ಸುರಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದೆ. ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌಧರಿ ಅವರು ಸಭಾಪತಿ ಬಸವರಾಜ ಹೊರಟ್ಟಿಗೆ ಪತ್ರ ಬರೆದಿದ್ದಾರೆ. ಸಿ.ಟಿ. ರವಿ ಪರಿಷತ್ ನಲ್ಲಿ ಅಸಂವಿಧಾನಿಕ ಪದ ಬಳಸಿದ್ದಾರೆ. ಹೀಗಾಗಿ ಈ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.