ದಾವಣಗೆರೆ : ದಾವಣಗೆರೆಯಲ್ಲಿ ಸಂಚಲನ ಮೂಡಿಸಿರುವ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಠಾಣೆಯ ಎಸ್‌ಐ ಮಂಜುಳಾ ಡಿ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.
ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐ ಮಂಜುಳಾ ಡಿ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ದಾವಣಗೆರೆ ಅಜಾದ್ ನಗರ ಪೊಲೀಸ್ ಠಾಣೆಯ ಎಸ್‌ಐ ಜಯರತ್ನಮ್ಮ ಅವರನ್ನು ನೇಮಕ ಮಾಡಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಆದೇಶ ಹೊರಡಿಸಿದ್ದಾರೆ.
ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರ ಸೂಚನೆಯ ಮೇರೆಗೆ ಈ ವರ್ಗಾವಣೆ ಆದೇಶ ಜಾರಿಗೊಂಡಿದೆ ಎಂದು ತಿಳಿದುಬಂದಿದೆ. ಪ್ರಕರಣದ ದೂರು ದಾಖಲಿಸಿಕೊಂಡಿದ್ದ ಎಸ್‌ಐ ಮಂಜುಳಾ, ವಚನಾನಂದ ಸ್ವಾಮೀಜಿಯನ್ನು ಎರಡು ಬಾರಿ ಹರಿಹರ ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದ್ದರು.
ಇದೀಗ ದಿಢೀರ್ ವರ್ಗಾವಣೆ ಕುತೂಹಲಕ್ಕೆ ಕಾರಣವಾಗಿದ್ದು, ತನಿಖೆಯ ದಿಕ್ಕು ಯಾವ ರೀತಿಯಲ್ಲಿ ಸಾಗಲಿದೆ ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಇದೀಗ ಪ್ರಕರಣದ ಮುಂದಿನ ತನಿಖೆಯ ಜವಾಬ್ದಾರಿಯನ್ನು ಎಸ್‌ಐ ಜಯರತ್ನಮ್ಮ ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ ; ಜೂನ್ ಗಡುವಿಗೆ ಬ್ರೇಕ್, ಆಗಸ್ಟ್ ಒಳಗೆ ಜಿಬಿಎ ಚುನಾವಣೆ ನಡೆಸಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ತಾಕೀತು!



















