ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣದ ಮೊದಲ ಆರೋಪಿಯಾದ ಹೈದರಾಬಾದ್‌ನ ಜಿ.ಸತ್ಯನಾರಾಯಣ ವರ್ಮಾ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 23ನೇ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷನ್ಸ್ ನ್ಯಾಯಾಲಯದ (ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸ್ಥಾಪನೆಗೊಂಡ ವಿಶೇಷ ನ್ಯಾಯಾಲಯ) ಇಡೀ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಸತ್ಯನಾರಾಯಣ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪ್ರಕಟಿಸಿದ್ದು, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
“ನ್ಯಾಯಪೀಠದ ಆದೇಶವೇನು ?”
ಅರ್ಜಿದಾರರ ವಿರುದ್ಧ ಗಂಭೀರ ಆರೋಪಗಳಿವೆ. ಪ್ರಕರಣದ ಬಗ್ಗೆ ತನಿಖಾಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿದಾರರ ವಿರುದ್ದದ ಪ್ರಕರಣ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಪೂರ್ಣ ಪ್ರಮಾಣದ ವಿಚಾರಣೆಗೂ ಮೊದಲೇ ಪ್ರಕರಣವನ್ನು ರದ್ದು ಕೋರಿ ಅರ್ಜಿದಾರರು ಈ ಅರ್ಜಿ ಸಲ್ಲಿಸಿದ್ದಾರೆ ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ಆದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಅರ್ಜಿದಾರರು ಈ ಮೊದಲು ತಮ್ಮ ಬಂಧನವನ್ನು ಅಕ್ರಮವೆಂದು ಘೋಷಣೆ ಮಾಡುವಂತೆ ಕೋರಿ ಒಂದು ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಹೈಕೋರ್ಟ್ ಮತ್ತೊಂದು ನ್ಯಾಯಪೀಠ ವಜಾಗೊಳಿಸಿ ಆದೇಶಿಸಿತ್ತು. ಅದಾದ ಒಂದು ವಾರ ನಂತರ ಈ ಅರ್ಜಿ ಸಲ್ಲಿಕೆ ಆಗಿದೆ. ಒಂದು ಅರ್ಜಿಯಲ್ಲಿ ಪರಿಹಾರ ದೊರಕದಿದ್ದರೆ, ಬೇರೆ ಅಂಶಗಳನ್ನು ಹುಡುಕಿ ಮತ್ತೊಂದು ಹೊಸ ಅರ್ಜಿ ಸಲ್ಲಿಸುತ್ತಾ ಕಾನೂನು ದುರುಪಯೋಗ ಮಾಡಿಕೊಳ್ಳಲಾಗಿದೆ. ಅರ್ಜಿದಾರರ ಈ ನಡೆಯನ್ನು ಒಪ್ಪಲು ಸಾಧ್ಯವಿಲ್ಲ. ವಿಚಾರಣಾ ನ್ಯಾಯಾಲಯ ವಿಚಾರಣೆ ಮುಂದುವರಿಯಬೇಕಿದೆ ಎಂದು ತಿಳಿಸಿರುವ ಹೈಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.