ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವಿವರ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಯೂನಿಯನ್ ಬ್ಯಾಂಕ್ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಕೇಸ್ ದಾಖಲಿಸಿದೆ. ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯ್ದೆ ಸೆಕ್ಷನ್ 35ಎ ಅಡಿ ಸಿಬಿಐ ತನಿಖೆಗೆ ಇತ್ತೀಚಿಗೆ ಹೈಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಸದ್ಯ ರಾಜ್ಯದೊಳಗೆ ತನಿಖೆ ನಡೆಸಲು ಸಿಬಿಐಗೆ ನಿರ್ಬಂಧಗಳಿವೆ.
ಯೂನಿಯನ್ ಬ್ಯಾಂಕ್ ಅರ್ಜಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಅಧಿಕಾರ ರಾಜ್ಯ ಪೊಲೀಸರಿಗೆ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಆದರೆ, ನ. 13 ರಂದು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿರುವ ರಾಜ್ಯ ಪೊಲೀಸರನ್ನು ಹೊರತುಪಡಿಸಿ, ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟಿತ್ತು.