ಮಳೆರಾಯನ ಅಬ್ಬರಕ್ಕೆ ಈಗಾಗಲೇ ಇಡೀ ರಾಜ್ಯವೇ ನಲುಗಿ ಹೋಗಿದೆ. ಆದರೆ, ಇನ್ನೂ 6 ದಿನ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಹಲವೆಡೆ ರೈತರು ಸಾಕಪ್ಪ ಎಂದು ಮಳೆರಾಯನ ಕೈ ಮುಗಿಯುತ್ತಿದ್ದಾರೆ.
ಆಗಸ್ಟ್ 6ರ ವರೆಗೂ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಕೂಡ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ. ಉಳಿದಂತೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.