ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಮತ್ತೊಮ್ಮೆ ಸಮರ ಸಾರಲು ಮುಂದಾಗಿದೆ.
ದಕ್ಷಿಣ ಭಾರತದ ರಾಜ್ಯಗಳ ಜೊತೆಗೆ ಕರ್ನಾಟಕ ಮಾತುಕತೆ ನಡೆಸುತ್ತಿದ್ದು, ಲೋಕಸಭಾ ಕ್ಷೇತ್ರ ಮರು ವಿಂಗಡಣೆ ವಿರೋಧಿಸಿ ಕೇಂದ್ರದ ವಿರುದ್ದ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಒನ್ ನೇಷನ್ ಒನ್ ಇಲೆಕ್ಷನ್ ಜಾರಿಗೆ ಈಗ ರಾಜ್ಯ ಸರ್ಕಾರ ವಿರೋಧಿಸುತ್ತಿದೆ. ಒನ್ ನೇಷನ್ ಒನ್ ಇಲೆಕ್ಷನ್ ಬಗ್ಗೆ ದಕ್ಷಿಣ ಭಾರತದ ರಾಜ್ಯಗಳು ಆತಂಕ ಪಡುವುದು ಬೇಡ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕೆಂಡಕಾರಿದ್ದಾರೆ.
ಈ ವಿಚಾರವಾಗಿ ಗುಡುಗಿದ ಸಿಎಂ ಸಿದ್ದರಾಮಯ್ಯ, ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ. ಕ್ಷೇತ್ರ ಮರುವಿಂಗಡಣೆ ಮೂಲಕ ದಕ್ಷಿಣದ ರಾಜ್ಯಗಳ ಜನತೆಗೆ ಕೇಂದ್ರ ಶಿಕ್ಷಿಸುವ ದುರುದ್ಧೇಶ ಹೊಂದಿದೆ. ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕು ಎಂದು ಸವಾಲು ಹಾಕಿದ್ದಾರೆ.
ಕ್ಷೇತ್ರ ಮರು ವಿಂಗಡಣೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಆತಂಕವೇನು?
ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರು ವಿಂಗಡಣೆ ನಡೆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ. ಕಳೆದ 50 ವರ್ಷಗಳಲ್ಲಿ ದಕ್ಷಿಣದ ರಾಜ್ಯಗಳು ಪರಿಣಾಮಕಾರಿ ಕ್ರಮಗಳ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿವೆ. ಇದೇ ವೇಳೆ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶದಂತಹ ಉತ್ತರದ ರಾಜ್ಯಗಳು ಜನಸಂಖ್ಯೆಯ ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಇದರಿಂದಾಗಿ ಕ್ಷೇತ್ರ ಮರುವಿಂಗಡಣೆಯನ್ನು ಇತ್ತೀಚಿನ ಜನಗಣತಿಯಿಂದ ಪಡೆದ ಜನಸಂಖ್ಯೆಯ ಅನುಪಾತದ ಮೇಲೆ ನಡೆಸಿದರೆ ಜನಸಂಖ್ಯೆಯ ನಿಯಂತ್ರಣ ಮಾಡಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಬಹುದು. ಇಲ್ಲದೆ ಇದ್ದರೆ ಉತ್ತರದ ರಾಜ್ಯಗಳ ಕ್ಷೇತ್ರಗಳ ಪ್ರಮಾಣದಲ್ಲಿ ಏರಿಕೆ ಆಗಲಾರದು. ಈ ಎರಡೂ ಬೆಳವಣಿಗಳಿಂದ ದಕ್ಷಿಣದ ರಾಜ್ಯಗಳಿಗೆ ಹೆಚ್ಚು ನಷ್ಟವಾಗಲಿದೆ.
ಕರ್ನಾಟಕದ ಸಂಸದರ ಸಂಖ್ಯೆ ಇಳಿಕೆ ಸಾಧ್ಯತೆ!
ಉತ್ತರದ ರಾಜ್ಯಗಳ ಸಂಸದರ ಸಂಖ್ಯೆ ಭಾರೀ ಹೆಚ್ಚಳ
ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರು ವಿಂಗಡಣೆ ನಡೆದರೆ, ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕೆ ಇಳಿಯುವ ಸಾಧ‍್ಯತೆ ಇದೆ. ಇದೇ ರೀತಿ ಆಂಧ್ರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 42ರಿಂದ 34, ಕೇರಳದ ಸಂಖ್ಯೆ 20ರಿಂದ 12ಕ್ಕೆ, ತಮಿಳುನಾಡಿನ ಸಂಖ್ಯೆ 39ರಿಂದ 31ಕ್ಕೆ ಇಳಿಯಲಿದೆ. ಇದೇ ವೇಳೆ ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 80ರಿಂದ 91, ಬಿಹಾರದ ಸಂಖ್ಯೆ 40ರಿಂದ 50, ಮಧ್ಯಪ್ರದೇಶದ ಸಂಖ್ಯೆ 29ರಿಂದ 33ಕ್ಕೆ ಏರಿಕೆಯಾಗಲಿದೆ. ಈ ರೀತಿ ಆದರೆ, ಇದನ್ನು ಅನ್ಯಾಯ ಅನ್ನದೇ ಮತ್ತೇನು ಅನ್ನಬೇಕು? ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಅನ್ಯಾಯವನ್ನು ಖಂಡಿತ ಸಹಿಸಲು ಸಾಧ್ಯವಿಲ್ಲ. ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗಬಾರದೆಂದರೆ ಒಂದೋ 1971ರ ಜನಗಣತಿಯನ್ನು ಧಾರವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಜನಸಂಖ್ಯೆಯ ಮಾನದಂಡವನ್ನು ಕೈಬಿಟ್ಟು ಈಗಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಅನುಪಾತಕ್ಕನುಗುಣವಾಗಿ ಹೆಚ್ಚಿಸಬೇಕು. ದಕ್ಷಿಣ ರಾಜ್ಯಗಳ ದನಿಯನ್ನು ಇನ್ನಷ್ಟು ಕ್ಷೀಣಗೊಳಿಸುವ ದುರುದ್ದೇಶದಿಂದ ಕೇಂದ್ರದ ಬಿಜೆಪಿ ಸರ್ಕಾರ ಈಗ ಕ್ಷೇತ್ರ ಮರುವಿಂಗಡಣೆಯ ಹೊಸ ಅಸ್ತ್ರ ಹೂಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ದಕ್ಷಿಣ ಭಾರತದ ಉಳಿದ ರಾಜ್ಯಗಳ ಜೊತೆಗೆ ಮಾತುಕತೆ ನಡೆಸಿರುವ ಕಾಂಗ್ರೆಸ್, ಮುಂದಿನ ದಿನಗಳಲ್ಲಿ ಕ್ಷೇತ್ರ ಮರುವಿಂಗಡಣೆ ವಿರೋಧಿಸಿ ಕೇಂದ್ರದ ವಿರುದ್ದ ಹೋರಾಟ ರೂಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.