ಕೋಲ್ಕತ್ತಾ : ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮೂವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಸ್ಥಳೀಯರಾಗಿದ್ದು, ಅವರ ಗುರುತನ್ನು ಇನ್ನೂ ಬಹಿರಂಗಪಡಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಡಿಶಾದ ಜಾಲೇಶ್ವರ ಮೂಲದ 23 ವರ್ಷದ ವಿದ್ಯಾರ್ಥಿನಿ, ದುರ್ಗಾಪುರದ ಶಿವಾಪುರ ಪ್ರದೇಶದಲ್ಲಿರುವ ಐಕ್ಯೂ ಸಿಟಿ ಮೆಡಿಕಲ್ ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ಶುಕ್ರವಾರ ರಾತ್ರಿ ಆಕೆ ತನ್ನ ಸ್ನೇಹಿತನೊಂದಿಗೆ ಹೊರಗೆ ಹೋಗಿದ್ದಾಗ, ಕಾಲೇಜು ಗೇಟ್ ಬಳಿ ಕೆಲವರು ಅವರನ್ನು ಅಡ್ಡಗಟ್ಟಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಿಂದ ಸುಮಾರು 1 ಕಿಲೋಮೀಟರ್ ದೂರದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.
ಆರೋಪಿಗಳು ಸಂತ್ರಸ್ತೆಯ ಫೋನ್ ಮತ್ತು 5,000 ರೂಪಾಯಿಗಳನ್ನೂ ದೋಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಂತ್ರಸ್ತೆಯ ಕುಟುಂಬದವರು, ಆಕೆಯ ಸ್ನೇಹಿತನೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ಆರೋಪಿಸಿದ್ದು, “ಸುಳ್ಳು ನೆಪ ಹೇಳಿ ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದಾನೆ” ಎಂದು ದೂರಿದ್ದಾರೆ.
ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಸಮಾನ ಉದ್ದೇಶದಿಂದ ಅಪರಾಧ ಎಸಗಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯ ಸ್ನೇಹಿತ ಸೇರಿದಂತೆ ಹಲವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ಸಹ ದಾಖಲಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳ ಪೊಲೀಸರು ‘ಎಕ್ಸ್’ (ಟ್ವಿಟರ್) ಮೂಲಕ ಹೇಳಿಕೆ ನೀಡಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ಘಟನೆಯ ಬಗ್ಗೆ “ಪರಿಶೀಲಿಸದ ಮಾಹಿತಿಯನ್ನು” ಹಂಚಿಕೊಳ್ಳದಂತೆ ಜನರನ್ನು ಒತ್ತಾಯಿಸಿದ್ದಾರೆ.
ರಾಜಕೀಯ ವಾಗ್ವಾದ : ಸಂತ್ರಸ್ತೆ ದುರ್ಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, “ಚೇತರಿಸಿಕೊಳ್ಳುತ್ತಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿಗೆ ಮಾನಸಿಕ ಆಪ್ತ ಸಮಾಲೋಚನೆ ನೀಡಲಾಗುವುದು ಎಂದು ಪಶ್ಚಿಮ ಬಂಗಾಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿ ಪಂಜಾ ಹೇಳಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. “ವಿದ್ಯಾರ್ಥಿನಿಯ ಜೊತೆ ಹೋಗಿದ್ದ ಸ್ನೇಹಿತನ ಮೇಲೆ ಅನುಮಾನವಿದೆ. ಆತನೇ ಆಕೆಯನ್ನು ಹೊರಗೆ ಹೋಗಲು ಒತ್ತಾಯಿಸಿದ್ದ. ಆಕೆ ಸಂಕಷ್ಟಕ್ಕೆ ಸಿಲುಕಿದಾಗ, ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸಬೇಕು,” ಎಂದು ಅವರು ಹೇಳಿದ್ದಾರೆ.
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಇದು “ಅತ್ಯಂತ ನೋವಿನ ಸಂಗತಿ” ಎಂದು ಬಣ್ಣಿಸಿದ್ದಾರೆ. ಅಲ್ಲದೆ, ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕ ಅಮಿತ್ ಮಾಳವಿಯಾ, ಮಮತಾ ಬ್ಯಾನರ್ಜಿ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ನಾಯಕ ಹಾಗೂ ಸಚಿವ ಬಾಬುಲ್ ಸುಪ್ರಿಯೋ ಈ ಘಟನೆಯನ್ನು “ನಾಚಿಕೆಗೇಡು ಮತ್ತು ದುರಂತ” ಎಂದು ಕರೆದಿದ್ದು, ಆರೋಪಿಗಳಿಗೆ “ಕಠಿಣ ಶಿಕ್ಷೆ” ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಹಿಂದೆ ಕೋಲ್ಕತ್ತಾದ ಆರ್.ಜಿ. ಕಾರ್ ವೈದ್ಯಕೀಯ ಕಾಲೇಜಿನಲ್ಲೂ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.