ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದಿರುವ ಒಳಬೇಗುದಿಯು ನಿಲ್ಲುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಅಧಿಕಾರದ ಹಂಚಿಕೆ, ದಲಿತ ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿ ಹತ್ತಾರು ವಿಚಾರಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತವು ರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾಗುತ್ತಿದೆ. ಇದರ ಬೆನ್ನಲ್ಲೇ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿ ಹಲವು ಬೇಡಿಕೆಗಳನ್ನು ಇರಿಸಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಡಾ.ಜಿ.ಪರಮೇಶ್ವರ್ ಭೇಟಿ ಮಾಡಿದ್ದು, ಹಲವು ಬೇಡಿಕೆಗಳನ್ನು ಇರಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೊದಲು ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಬೇಕು. ಹಿಂದುಳಿದ ವರ್ಗದವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದರೆ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷಕ್ಕೆ ಭಾರಿ ಅನುಕೂಲವಾಗಲಿದೆ ಎಂಬುದಾಗಿ ವೇಣುಗೋಪಾಲ್ ಅವರಿಗೆ ಮನವರಿಕೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದ ಹಂಚಿಕೆ ಒಪ್ಪಂದದ ಭಾಗವಾಗಿ ಸಿಎಂ ಪದವಿಯಿಂದ ಕೆಳಗಿಳಿಸಿದರೆ ದಲಿತ ನಾಯಕನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕು. ಇದರಿಂದ ರಾಜ್ಯದ ದಲಿತರಿಗೆ ನ್ಯಾಯ ಸಿಗಲಿದೆ. ಬಹುದಿನಗಳ ಬೇಡಿಕೆಯಾದ ದಲಿತ ಸಿಎಂ ಬೇಡಿಕೆಯನ್ನು ಈಡೇರಿಸಿದರೆ ಪಕ್ಷಕ್ಕೂ ಅನುಕೂಲ ಎಂಬ ಸಂದೇಶವನ್ನು ಹೈಕಮಾಂಡ್ ಗೆ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ದಲಿತ ಸಚಿವರು, ಶಾಸಕರನ್ನು ಒಗ್ಗೂಡಿಸುವ ದಿಸೆಯಲ್ಲಿ ಪರಮೇಶ್ವರ್ ಅವರು ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಇದಕ್ಕೆ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ನಿಂದ ತಡೆ ತಂದಿದ್ದರು. ಖರ್ಗೆ ಎಚ್ಚರಿಕೆಯ ಮಧ್ಯೆಯೂ ರಾಜ್ಯ ಕಾಂಗ್ರೆಸ್ಸಿನಲ್ಲಿ ಭಿನ್ನಮತ ಮುಂದುವರಿದಿದೆ. ಇದರ ಭಾಗವಾಗಿಯೇ ಪರಮೇಶ್ವರ್ ಅವರು ದೆಹಲಿಗೆ ತೆರಳಿದ್ದಾರೆ ಎಂಬುದು ದಿಟವಾಗಿದೆ.