2025ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸುತ್ತಿದ್ದು, ಭಾರತ ತಂಡ ಭಾಗವಹಿಸುವ ಕುರಿತು ಯಾವುದೇ ಸ್ಪಷ್ಟತೆ ಸಿಕ್ಕಿರಲಿಲ್ಲ. ಈ ಮಧ್ಯೆ ಅಮಿತ್ ಶಾ ಈ ಕುರಿತು ಮಾತನಾಡಿದ್ದಾರೆ.
ಪಾಕ್ ಗೆ ಭಾರತ ತಂಡ ತೆರಳುವ ಕುರಿತು ಹಿಂದೆ ಮಾತನಾಡಿದ್ದ ಬಿಸಿಸಿಐ, ಭಾರತ ಸರ್ಕಾರ ಅನುಮತಿ ನೀಡಿದರೆ ಮಾತ್ರ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಾಗಿ ಹೇಳಿತ್ತು. ಸದ್ಯ ಈ ಕುರಿತು ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಸಂಪೂರ್ಣವಾಗಿ ತೊಡೆದು ಹಾಕುವವರೆಗೆ ನಾವು ಪಾಕಿಸ್ತಾನ ಸರ್ಕಾರದ ಜೊತೆ ಯಾವುದೇ ಮಾತುಕತೆಗೆ ಮುಂದಾಗುವುದಿಲ್ಲ ಎಂದಿದ್ದಾರೆ.
ಭಾರತ ಸರ್ಕಾರ ಯಾವುದೇ ಕಾರಣಕ್ಕೂ ಚಾಂಪಿಯನ್ಸ್ ಟ್ರೋಫಿ ಆಡಲು ಭಾರತೀಯ ಆಟಗಾರರನ್ನು ಅಲ್ಲಿಗೆ ಕಳುಹಿಸುವುದಿಲ್ಲ ಎಂಬುವುದು ಕೂಡ ಈ ಹೇಳಿಕೆಯಿಂದ ಸ್ಪಷ್ಟವಾಗಿದೆ. ಹಿಂದೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಟೀಂ ಇಂಡಿಯಾವನ್ನು ಕಳುಹಿಸುವ ನಿರ್ಧಾರ ಸಂಪೂರ್ಣವಾಗಿ ಭಾರತ ಸರ್ಕಾರದ ಕೈಯಲ್ಲಿದೆ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಅಮಿತ್ ಶಾ, ಪಾಕಿಸ್ತಾನದ ಬಗ್ಗೆ ಈ ರೀತಿಯ ಹೇಳಿಕೆ ನೀಡಿರುವುದನ್ನು ಗಮಿಸಿದರೆ ಭಾರತ ಸರ್ಕಾರ, ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂಬುವುದು ಖಚಿತವಾದಂತೆ ಆಗಿದೆ.