ನವದೆಹಲಿ: ಪ್ರಯಾಗ್ರಾಜ್ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ (Maha Kumbh Mela Stampede) ಸಂಭವಿಸಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ
ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿತ್ತು. ಪರಿಣಾಮ ಕಾಲ್ತುಳಿತ ಸಂಭವಿಸಿದ್ದು, ಸುಮಾರು 15ಕ್ಕೂ ಅಧಿಕ ಜನರ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ(Yogi Adityanath) ಪ್ರಧಾನಿ ಮೋದಿ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆ ನಡೆದ ಕುರಿತು ವರದಿಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ನಾಲ್ಕು ಬಾರಿ ಕರೆ ಮಾಡಿ ಯೋಗಿ ಆದಿತ್ಯನಾಥ್ ಅವರಿಂದ ಮಾಹಿತಿ ಪಡೆದುಕೊಂಡಿದ್ದರು.
ಅಲ್ಲದೇ, ಪ್ರಕರಣದ ಕುರಿತು ಸಂತಾಪ ಸೂಚಿಸಿ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ನಿರತವಾಗಿದೆ. ಈ ನಿಟ್ಟಿನಲ್ಲಿ, ನಾನು ಮುಖ್ಯಮಂತ್ರಿ ಯೋಗಿ ಜೀ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.