ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಕಾವು ಜೋರಾಗಿದೆ. ಈ ಮಧ್ಯೆ ಮೂರೂ ಕ್ಷೇತ್ರ ಗೆಲ್ಲಲು ಎನ್ ಡಿಎ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಣತೊಟ್ಟಿವೆ. ಹೀಗಾಗಿ ಅಳೆದು ತೂಗಿ ಅಭ್ಯರ್ಥಿಗಳನ್ನು ಹಾಕುತ್ತಿವೆ.
ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ಈಗಾಗಲೇ ದೊಡ್ಡ ಬದಲಾವಣೆಯಾಗಿದೆ. ಮಾಜಿ ಸಚಿವ ಹಾಗೂ ಐದು ಬಾರಿ ಶಾಸಕರಾಗಿದ್ದ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಯೋಗೇಶ್ವರ್ ರನ್ನು ಕಣಕ್ಕೆ ಇಳಿಸಿದೆ. ಬಳ್ಳಾರಿಯ ಸಂಸದ ಇ. ತುಕಾರಾಂ ಅವರ ಪತ್ನಿ ಇ ಅನ್ನಪೂರ್ಣ ಅವರು ಸಂಡೂರು (ಎಸ್‌ಟಿ) ಕ್ಷೇತ್ರದ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಆದರೆ, ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಕಾಂಗ್ರೆಸ್ ಘೋಷಿಸಿಲ್ಲ.
ಅನ್ನಪೂರ್ಣ ಅವರು ಮೊದಲ ಬಾರಿಗೆ ಚುನಾವಣೆ ಸ್ಪರ್ಧಿಸುತ್ತಿದ್ದಾರೆ. ಯೋಗೇಶ್ವರ್ ಆರನೇ ಬಾರಿಗೆ ವಿಧಾನಸಭೆ ಪ್ರವೇಶಿಸಲು ಉತ್ಸುಕರಾಗಿದ್ದಾರೆ. ಇಂದು ಯೋಗೇಶ್ವರ್ ನಾಪತ್ರ ಸಲ್ಲಿಕೆ ಮಾಡಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯನ್ನು ಕಾಂಗ್ರೆಸ್ ಇನ್ನೂ ಘೋಷಣೆ ಮಾಡಿಲ್ಲ. ನಾಮಪತ್ರ ಸಲ್ಲಿಸಲು ಅ. 25 ಕೊನೆಯ ದಿನವಾಗಿದೆ. ಶಿಗ್ಗಾಂವಿಯಲ್ಲಿ ವೀರಶೈವ ಲಿಂಗಾಯತ ಮತ್ತು ಮುಸ್ಲಿಂ ಮುಖಂಡರು ಆಯಾ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದು ಆಯ್ಕೆ ಕಗ್ಗಂಟಾಗಿದೆ.
ಇನ್ನು ಬಿಜೆಪಿಯಿಂದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಣೆಯಾಗಿಲ್ಲ. ನವೆಂಬರ್ 13 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.