ಬೆಂಗಳೂರು: ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಂತೂ ಜನರು ಹೈರಾಣಾಗಿ ಹೋಗಿದ್ದಾರೆ. ಉತ್ತರ ಕನ್ನಡದಲ್ಲಿ (UttaraKannada) ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 3 ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರವಾರ (Karwar) ತಾಲೂಕಿನಲ್ಲಂತೂ ಮಳೆರಾಯನ ಅಟ್ಟಹಾಸ ಮಿತಿಮೀರಿದೆ. ಚಂಡಿಯಾ ಗ್ರಾಮದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ನಿರೀಕ್ಷೆಗೂ ಮೀರಿ ಮಳೆ (Heavy Rain) ಆಗಿರುವುದರಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಐವರನ್ನು ಬೋಟ್ ಮೂಲಕ ರಕ್ಷಿಸಲಾಗಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ನೂರಾರು ಹೆಕ್ಟೇರ್ ಕೃಷಿ ಭೂಮಿ ನೀರಲ್ಲಿ ಮುಳುಗಿ ಹೋಗಿದೆ.
ಎರಡೂ ಜಿಲ್ಲೆಗಳಲ್ಲಿನ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಸದ್ಯ ನದಿಯ ನೀರಿನ ಮಟ್ಟ 6.1 ಮೀಟರ್ ಏರಿಕೆಯಾಗಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಕೊಡಗು ಜಿಲ್ಲೆಯಲ್ಲಿ ಕೂಡ ಮಳೆರಾಯ ಅಬ್ಬರಿಸುತ್ತಿದ್ದಾನೆ. ಹೀಗಾಗಿ ಹಲವೆಡೆ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಲಕ್ಷಣವಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ, ಯಲ್ಲಾಪೂರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕೂಡ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಬಿಇಒ ಆದೇಶ ಹೊರಡಿಸಿದ್ದಾರೆ.