ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇವತ್ತಿನಿಂದ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರ ವರೆಗೆ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.