ದಾವಣಗೆರೆ : ಜಿಲ್ಲೆಯ ಚನ್ನಗಿರಿ ತಾಲೂಕಿನ ರೈತರ ಆತಂಕಕ್ಕೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಉಬ್ರಾಣಿ ಹೋಬಳಿ ವ್ಯಾಪ್ತಿಯ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಕಾಡಾನೆಯನ್ನು ರಂಗಯ್ಯನಗಿರಿ ಅರಣ್ಯ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಹಿಡಿಯಲಾಗಿದೆ.
ಸಕ್ರೆಬೈಲು ಆನೆ ಬಿಡಾರದಿಂದ ಕರೆತರಲಾದ 6 ಸಾಕಾನೆಗಳ ಸಹಾಯದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ರೊಪ್ಪದಹಟ್ಟಿ, ರಾಜಗೊಂಡನಹಳ್ಳಿ, ಮರವಂಜಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಕಾಡಾನೆ ರೈತರ ನಿದ್ದೆಗೆಡಿಸಿತ್ತು. ಇದೀಗ ಕಾಡಾನೆ ಸೆರೆ ಸಿಕ್ಕಿರುವುದರಿಂದ ಮರವಂಜಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರು ನಿರಾಳರಾಗಿದ್ದಾರೆ.
ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಗೆ ಶಾಸಕ ಶಿವಗಂಗಾ ಬಸವರಾಜ ಅಭಿನಂದನೆ ಸಲ್ಲಿಸಿದ್ದಾರೆ. ಸೆರೆ ಹಿಡಿದ ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಸಲಾಗಿದ್ದು, ಸದ್ಯ ಲಾರಿಯಲ್ಲಿ ಸಕ್ರೆಬೈಲು ಆನೆ ಬಿಡಾರಕ್ಕೆ ಸ್ಥಳಾಂತರಿಸಲಾಗಿದೆ. ಮುಂದಿನ ಹಂತದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾಡಾನೆಯನ್ನು ಯಾವ ಅರಣ್ಯ ಪ್ರದೇಶಕ್ಕೆ ಬಿಡಬೇಕು ಎಂಬ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಪಬ್‌ನಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ‘ಅಮುಕು ಡುಮುಕು’ ಮಂಜು ವಿರುದ್ಧ FIR!



















